ಕಲಬುರಗಿ (ನ. 25): ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ದುರಂತದಲ್ಲಿ ಅವರ ಸಹೋದರ ಶಂಕರ ಬೀಳಗಿ ಹಾಗೂ ಇನ್ನೊಬ್ಬ ಸಹಪ್ರಯಾಣಿಕ ಈರಣ್ಣ ಶಿರಸಂಗಿ ಸಹ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆ ವಿವರ:
ಇಂದು ವಿಜಯಪುರದಿಂದ ಕಲಬುರಗಿಗೆ ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ.ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರನ್ನು ತಕ್ಷಣವೇ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಈ ಹಿಂದೆ ಬೆಸ್ಕಾಂ (BESCOM) ವ್ಯವಸ್ಥಾಪಕ ನಿರ್ದೇಶಕರಾಗಿ ಮತ್ತು ದಾವಣಗೆರೆ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಮಹಾಂತೇಶ್ ಬೀಳಗಿ ಅವರ ನಿಧನಕ್ಕೆ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

