ದಾವಣಗೆರೆ: ದಾವಣಗೆರೆ ನಗರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ನಿವೃತ್ತ ಉಪ ಪೊಲೀಸ್ ವರಿಷ್ಠಾಧಿಕಾರಿಯೊಬ್ಬರು ತಮ್ಮ ಸ್ವಂತ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಿನ್ನೆ, ಶನಿವಾರ (ನವೆಂಬರ್ 29) ಈ ದುರಂತ ಸಂಭವಿಸಿದೆ. ಮೃತರನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಮೂಲದವರಾದ ಎಚ್. ವೈ. ತುರಾಯಿ (75) ಎಂದು ಗುರುತಿಸಲಾಗಿದೆ.
ಘಟನೆ ವಿವರ
ದಾವಣಗೆರೆಯ ಟಿಜೆ ನಗರ ವ್ಯಾಪ್ತಿಯಲ್ಲಿರುವ ತಮ್ಮ ಮನೆಯಲ್ಲಿ ತುರಾಯಿ ಅವರು ಬ್ಯಾರೆಲ್ ಗನ್ (Barrel Gun) ಮೂಲಕ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ನಡೆದ ಸಮಯದಲ್ಲಿ ಅವರ ಪುತ್ರ ಮನೆಯ ಮೇಲಿನ ಮಹಡಿಯಲ್ಲಿ ಮತ್ತೊಂದು ಕೋಣೆಯಲ್ಲಿ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಗುಂಡಿನ ಸದ್ದು ಕೇಳಿ ಮನೆ ಸದಸ್ಯರು ಸ್ಥಳಕ್ಕೆ ಧಾವಿಸಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಯಿತಾದರೂ, ಅವರು ಈಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಕೆಟಿಜೆ ನಗರದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಯಿತು. ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ತಕ್ಷಣಕ್ಕೆ ತಿಳಿದು ಬಂದಿಲ್ಲ.

