ಬೆಂಗಳೂರು(ಡಿ.14): ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ದಿವಂಗತ ಶಾಮನೂರು ಶಿವಶಂಕರಪ್ಪ ಅವರು ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಮೂವರು ಪುತ್ರರು ಮತ್ತು ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರು ರಾಜಕೀಯದಲ್ಲಿ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಪ್ರಮುಖ ಪಾತ್ರ ವಹಿಸಿದ್ದರು.
ಅವರು ರಾಜ್ಯ ರಾಜಕಾರಣದಲ್ಲಿ ಹಿರಿಯ ಶಾಸಕರೆಂದು ಗುರುತಿಸಿಕೊಂಡಿದ್ದರು.ಅವರ ನಿಧನಕ್ಕೆ ಮುಖ್ಯಮಂತ್ರಿಗಳು ಮತ್ತು ಹಲವು ರಾಜಕೀಯ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

