ಪುತ್ತೂರು ತಾಲೂಕಿನ ಮೊಟ್ಟೆತ್ತಡ್ಕ ಮಿಶನ್ ಮೂಲೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಹಾಗೂ ಶ್ರೀ ಚಾಮುಂಡೇಶ್ವರಿ ಶಿಲಾಮಯ ದೇವಾಲಯಗಳ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ಅದ್ದೂರಿಯಾಗಿ ನೆರವೇರಿತು. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡರು.


ದೇವಸ್ಥಾನದ ಅಭಿವೃದ್ಧಿ ಸಮಿತಿ ಹಾಗೂ ಸ್ಥಳೀಯ ಭಕ್ತಾದಿಗಳ ಸಹಯೋಗದಲ್ಲಿ ನಡೆದ ಸಮಾರಂಭದಲ್ಲಿ ಅರೆಮಾದನಹಳ್ಳಿಯ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ಮತ್ತು ಮಾಣಿಲ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ಶಿಲಾನ್ಯಾಸ ಪ್ರಕ್ರಿಯೆ ನಡೆಯಿತು. ಮುಕ್ರಂಪಾಡಿಯಿಂದ ಮೊಟ್ಟೆತ್ತಡ್ಕದವರೆಗೆ ಭಜನಾ ತಂಡಗಳೊಂದಿಗೆ ಪೂರ್ಣಕುಂಭ ಸ್ವಾಗತ ಹಾಗೂ ಭವ್ಯ ಮೆರವಣಿಗೆ ನಡೆಯಿತು.
ದೇವಾಲಯದ ಗರ್ಭಗುಡಿ ನಿರ್ಮಾಣಕ್ಕೆ ಬಳಸಲಾಗುವ ಶಿಲೆಗಳನ್ನು ವೀಕ್ಷಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರು ದೇವಾಲಯದ ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ, “ಧಾರ್ಮಿಕ ಕೇಂದ್ರಗಳು ಸಮಾಜದಲ್ಲಿ ಸಂಸ್ಕಾರ ಮತ್ತು ಒಗ್ಗಟ್ಟನ್ನು ಬೆಳೆಸುವ ತಾಣಗಳಾಗಿವೆ. ಮೊಟ್ಟೆತ್ತಡ್ಕದ ಈ ಪುಣ್ಯಕ್ಷೇತ್ರವು ಶಿಲಾಮಯವಾಗಿ ಭವ್ಯವಾಗಿ ಮೂಡಿಬರಲಿ” ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ದೇವಾಲಯದ ಪದಾಧಿಕಾರಿಗಳು ಹಾಗೂ ನೂರಾರು ಭಕ್ತಾದಿಗಳು ಉಪಸ್ಥಿತರಿದ್ದರು.

