ಬೆಂಗಳೂರು: ನಗರದ ಜಗಜೀವನ್ ರಾಮ್ ನಗರ (ಜೆಜೆಆರ್ ನಗರ) ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ಧಾರ್ಮಿಕ ಮೆರವಣಿಗೆಯ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಘಟನೆಯ ವಿವರ: ಸ್ಥಳೀಯ ಓಂ ಶಕ್ತಿ ದೇವಸ್ಥಾನದಿಂದ ದೇವತಾ ಮೂರ್ತಿಯ ರಥೋತ್ಸವ ಮೆರವಣಿಗೆ ಸಾಗುತ್ತಿದ್ದಾಗ ಈ ಅಹಿತಕರ ಘಟನೆ ಸಂಭವಿಸಿದೆ. ಭಕ್ತರು ರಥವನ್ನು ಎಳೆಯುತ್ತಿದ್ದ ಸಂದರ್ಭದಲ್ಲಿ ದಿಢೀರನೆ ಕಲ್ಲು ತೂರಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂಲಗಳ ಪ್ರಕಾರ, ಈ ಘಟನೆಯಲ್ಲಿ ಇಬ್ಬರು ಮಕ್ಕಳಿಗೆ ಗಾಯಗಳಾಗಿವೆ. ಒಂದು ಮಗುವಿನ ತಲೆಗೆ ತೀವ್ರ ಪೆಟ್ಟಾಗಿದ್ದು, ಮತ್ತೊಬ್ಬ ಯುವತಿಗೂ ತಲೆಗೆ ಪೆಟ್ಟು ಬಿದ್ದಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ರಥೋತ್ಸವದ ಮೇಲೆ ಕಲ್ಲು ತೂರಾಟ ನಡೆದಿರುವ ಬಗ್ಗೆ ನಮಗೆ ದೂರು ಲಭ್ಯವಾಗಿದೆ. ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಶಾಂತಿ ಕದಡಲು ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ,” ಎಂದು ಹೇಳಿದ್ದಾರೆ.
”ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದೂರು ದಾಖಲಿಸಿಕೊಂಡಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು,” ಎಂದು ಪೊಲೀಸರು ಭರವಸೆ ನೀಡಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ಜೆಜೆಆರ್ ನಗರದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.

