ಬೀದರ್: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ (ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ) ಪ್ರಗತಿ ಪರಿಶೀಲನಾ ಸಭೆಯು ತೀವ್ರ ಸಂಘರ್ಷಕ್ಕೆ ಸಾಕ್ಷಿಯಾಯಿತು. ಸಚಿವರ ಎದುರಲ್ಲೇ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಹಾಗೂ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ಪರಸ್ಪರ ಕೈಕೈ ಮಿಲಾಯಿಸಿಕೊಂಡ ಘಟನೆ ನಡೆದಿದೆ.

ಅರಣ್ಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಅಭಿವೃದ್ಧಿ ಕಾಮಗಾರಿಗಳ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಹಾಗೂ ಕಾಂಗ್ರೆಸ್ ಎಂಎಲ್ಸಿ ಭೀಮರಾವ್ ಪಾಟೀಲ್ ನಡುವೆ ಮಾತಿನ ಚಕಮಕಿ ಆರಂಭವಾಯಿತು.
ಚರ್ಚೆ ಕಾವೇರುತ್ತಿದ್ದಂತೆ ಇಬ್ಬರೂ ನಾಯಕರು ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡು, ಆಸನದಿಂದ ಎದ್ದು ಒಬ್ಬರನ್ನೊಬ್ಬರು ತಳ್ಳಾಡಿ ದೈಹಿಕ ಸಂಘರ್ಷಕ್ಕಿಳಿದರು. ಸಚಿವ ಈಶ್ವರ ಖಂಡ್ರೆ ಹಾಗೂ ಇತರ ಅಧಿಕಾರಿಗಳು ಇಬ್ಬರನ್ನೂ ಸಮಾಧಾನಪಡಿಸಲು ಪ್ರಯತ್ನಿಸಿದರೂ ಪರಿಸ್ಥಿತಿ ಕೈಮೀರಿತ್ತು.
ವೈರಲ್ ಆದ ವಿಡಿಯೋ: ಸಭೆಯಲ್ಲಿ ನಡೆದ ಈ ಗದ್ದಲದ ದೃಶ್ಯಗಳು ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿವೆ. ಜನಪ್ರತಿನಿಧಿಗಳ ಈ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಜಿಲ್ಲೆಯ ಅಭಿವೃದ್ಧಿ ಬಗ್ಗೆ ಚರ್ಚಿಸಬೇಕಾದ ಸಭೆಯಲ್ಲಿ ಶಾಸಕರು ಕುಸ್ತಿಗಿಳಿದಿರುವುದು ದುರದೃಷ್ಟಕರ ಎಂದು ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

