ಪಶ್ಚಿಮ ಏಷ್ಯಾದಲ್ಲಿ ಹಠಾತ್ ಉಂಟಾದ ಯುದ್ಧದ ಭೀತಿಯ ನಡುವೆ, ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿದ್ದ ಸುಮಾರು 52,000ಕ್ಕೂ ಹೆಚ್ಚು ಭಾರತೀಯರನ್ನು ಯಶಸ್ವಿಯಾಗಿ ತಾಯ್ನಾಡಿಗೆ ಕರೆತರಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತಿಳಿಸಿದೆ.

ಮಾರ್ಚ್ 1 ರಿಂದ ಮಾರ್ಚ್ 7ರ ನಡುವೆ ಈ ಬೃಹತ್ ಸ್ಥಳಾಂತರ ಪ್ರಕ್ರಿಯೆ ನಡೆದಿದೆ. ಈ ಕುರಿತು ಮಾಹಿತಿ ನೀಡಿರುವ ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್ ಜೈಸ್ವಾಲ್, ಸಂಕಷ್ಟದಲ್ಲಿದ್ದ ಭಾರತೀಯರ ಸುರಕ್ಷತೆಗೆ ಸರ್ಕಾರ ಮೊದಲ ಆದ್ಯತೆ ನೀಡಿದೆ ಎಂದಿದ್ದಾರೆ.
24/7 ಸಹಾಯವಾಣಿ ಮತ್ತು ನಿಯಂತ್ರಣ ಕೊಠಡಿ
ಪಶ್ಚಿಮ ಏಷ್ಯಾದಲ್ಲಿನ ಬೆಳವಣಿಗೆಗಳನ್ನು ಭಾರತ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ. ತುರ್ತು ಪರಿಸ್ಥಿತಿಗಾಗಿ ದೆಹಲಿಯಲ್ಲಿ ವಿಶೇಷ ನಿಯಂತ್ರಣ ಕೊಠಡಿಯನ್ನು (Special Control Room) ಸ್ಥಾಪಿಸಲಾಗಿದೆ. ಅಲ್ಲದೆ, ಸಂಘರ್ಷ ಪೀಡಿತ ದೇಶಗಳಲ್ಲಿರುವ ಭಾರತೀಯ ರಾಯಭಾರ ಕಚೇರಿಗಳು 24/7 ಸಹಾಯವಾಣಿಯನ್ನು ತೆರೆದಿವೆ.
”ಪ್ರಸ್ತುತ ವಾಣಿಜ್ಯ ವಿಮಾನಗಳು ಲಭ್ಯವಿಲ್ಲದ ಪ್ರದೇಶಗಳಲ್ಲಿರುವ ಭಾರತೀಯರು ತಕ್ಷಣವೇ ಸ್ಥಳೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಬೇಕು. ಮುಂದಿನ ದಿನಗಳಲ್ಲಿ ಮತ್ತಷ್ಟು ವಿಮಾನಗಳನ್ನು ಕಾರ್ಯಾಚರಣೆಗೊಳಿಸಲು ಯೋಜನೆ ರೂಪಿಸಲಾಗಿದೆ,” ಎಂದು ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.
ಯುದ್ಧ ಪೀಡಿತ ಪ್ರದೇಶಗಳಲ್ಲಿರುವ ಭಾರತೀಯರು ಸ್ಥಳೀಯ ಸರ್ಕಾರಗಳು ನೀಡುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮತ್ತು ರಾಯಭಾರ ಕಚೇರಿಯ ಸಂಪರ್ಕದಲ್ಲಿರುವಂತೆ ವಿದೇಶಾಂಗ ಇಲಾಖೆ ಸಲಹೆ ನೀಡಿದೆ.

