ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬುಧವಾರ ಸಂಭವಿಸಿದ ಭೀಕರ ಮಳೆ ಮತ್ತು ಗಾಳಿಗೆ ಶಿವಾಜಿನಗರದ ಸರ್ಕಾರಿ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ. ಈ ದುರಂತದಲ್ಲಿ ಆರು ವರ್ಷದ ಬಾಲಕಿ ಹಾಗೂ ಕೇರಳದ ಇಬ್ಬರು ಪ್ರವಾಸಿಗರು ಸೇರಿದಂತೆ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ.

ಗೋಡೆ ಕುಸಿತದ ಭೀಕರ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಆಘಾತ ಮತ್ತು ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಆರ್ಥಿಕ ನೆರವನ್ನು ಘೋಷಿಸಲಾಗಿದೆ.
ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿಗಳ ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ. ಈ ಹಣವನ್ನು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಒದಗಿಸಲಾಗುವುದು ಎಂದು ಪ್ರಧಾನಿ ಕಾರ್ಯಾಲಯ (PMO) ಮಾಹಿತಿ ನೀಡಿದೆ.
ದುರಂತದ ವಿವರ: ಬುಧವಾರ ಸಂಜೆ ಬೆಂಗಳೂರಿನಲ್ಲಿ ಗುಡುಗು ಸಹಿತ ಸುರಿದ ಭಾರೀ ಮಳೆಯಿಂದ ರಕ್ಷಣೆ ಪಡೆಯಲು ಬೀದಿ ಬದಿಯ ವ್ಯಾಪಾರಿಗಳು ಮತ್ತು ಪ್ರವಾಸಿಗರು ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆಯ ಬಳಿ ಆಶ್ರಯ ಪಡೆದಿದ್ದರು. ಈ ವೇಳೆ ಮಳೆಯ ಹೊಡೆತಕ್ಕೆ ಗೋಡೆ ಏಕಾಏಕಿ ಕುಸಿದು ಬಿದ್ದಿದೆ. ಪರಿಣಾಮ ಏಳು ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ, ಐವರು ಮಹಿಳೆಯರು ಸೇರಿದಂತೆ ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಘಟನಾ ಸ್ಥಳ ಮತ್ತು ಬೌರಿಂಗ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ಗಾಯಾಳುಗಳ ಆರೋಗ್ಯ ವಿಚಾರಿಸಿದರು. “ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರೆ ಈ ದುರಂತವನ್ನು ತಪ್ಪಿಸಬಹುದಿತ್ತು” ಎಂದು ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವಂತೆ ಆದೇಶಿಸಿದರು.
ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

