ಮಂಗಳೂರು, ಜು.1: ಭಾರತೀಯ ಹವಾಮಾನ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿ ಆರೆಂಜ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಮಹತ್ವದ ಆದೇಶ ಹೊರಡಿಸಿದೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು, 2026ರ ಜುಲೈ 2 (ಗುರುವಾರ) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿವರೆಗೆ) ರಜೆ ಘೋಷಿಸಿದ್ದಾರೆ.
ಜಿಲ್ಲಾಡಳಿತವು ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಅನಗತ್ಯವಾಗಿ ನದಿ, ಹೊಳೆ, ಕೆರೆ ಹಾಗೂ ಸಮುದ್ರ ತೀರ ಪ್ರದೇಶಗಳಿಗೆ ತೆರಳಬಾರದು ಎಂದು ಎಚ್ಚರಿಕೆ ನೀಡಿದೆ. ಗುಡ್ಡ ಪ್ರದೇಶಗಳಲ್ಲಿ ವಾಸಿಸುವವರು ಹಾಗೂ ತಗ್ಗು ಪ್ರದೇಶದ ನಿವಾಸಿಗಳು ಹೆಚ್ಚಿನ ಮುನ್ನೆಚ್ಚರಿಕೆ ವಹಿಸಿ, ಅಗತ್ಯವಿದ್ದಲ್ಲಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.
ಇದೇ ವೇಳೆ, ಎಲ್ಲಾ ತಾಲೂಕು ಆಡಳಿತಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಿತ ಅಧಿಕಾರಿಗಳು ತುರ್ತು ಪರಿಸ್ಥಿತಿಗೆ ಸಜ್ಜಾಗಿದ್ದು, ಯಾವುದೇ ಅವಘಡ ಸಂಭವಿಸಿದರೆ ತಕ್ಷಣ ಸ್ಪಂದಿಸುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ.

