ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆ ಹಾಗೂ ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯನ್ನು ಪರಿಗಣಿಸಿ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪ್ರೌಢಶಾಲೋತ್ತರ (ಪಿಯುಸಿ) ಹಾಗೂ ಪದವಿ ಪೂರ್ವ ವಸತಿ ಕಾಲೇಜು ಗಳಿಗೆ 2026ರ ಜುಲೈ 3ರಂದು (ಶುಕ್ರವಾರ) ಜಿಲ್ಲಾಡಳಿತ ರಜೆ ಘೋಷಿಸಿದೆ.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಆದೇಶದಂತೆ, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಪರೀಕ್ಷೆಗಳು ನಿಗದಿಯಂತೆ ನಡೆಯಲಿದ್ದು, ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳು ಹಾಗೂ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ನದಿ, ಹಳ್ಳ, ತಗ್ಗು ಪ್ರದೇಶ ಹಾಗೂ ಸಮುದ್ರ ತೀರದ ಭಾಗಗಳಿಗೆ ಸಾರ್ವಜನಿಕರು ಅನಗತ್ಯವಾಗಿ ತೆರಳದಂತೆ ಜಿಲ್ಲಾಡಳಿತ ಮನವಿ ಮಾಡಿದೆ. ತುರ್ತು ಪರಿಸ್ಥಿತಿಯಲ್ಲಿ ಜಿಲ್ಲಾಡಳಿತದ ಸಹಾಯವಾಣಿ 1077 ಅಥವಾ 0824-2442590 ಸಂಪರ್ಕಿಸುವಂತೆ ಸೂಚಿಸಲಾಗಿದೆ.

