ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (SSR) ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗವು (ECI) ಪರಿಷ್ಕರಿಸಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ.

ರಾಜ್ಯ ಚುನಾವಣಾಧಿಕಾರಿಗಳ ಕಚೇರಿ ಹೊರಡಿಸಿರುವ ಪತ್ರಿಕಾ ಪ್ರಕಟಣೆಯ ಪ್ರಕಾರ, ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ ಮನೆಗೆ ಭೇಟಿ ನೀಡುವ ಅವಧಿಯನ್ನು ವಿಸ್ತರಿಸಲಾಗಿದೆ. ಈ ಹಿಂದೆ ಜುಲೈ 29 ರವರೆಗೆ ನಿಗದಿಪಡಿಸಲಾಗಿದ್ದ ಗಡುವನ್ನು ಈಗ ಆಗಸ್ಟ್ 8 ರವರೆಗೆ ವಿಸ್ತರಣೆ ಮಾಡಲಾಗಿದೆ.
ವೇಳಾಪಟ್ಟಿ ಬದಲಾವಣೆಯ ಹಿನ್ನೆಲೆಯಲ್ಲಿ, ಈ ಹಿಂದೆ ಆಗಸ್ಟ್ 5 ರಂದು ಪ್ರಕಟವಾಗಬೇಕಿದ್ದ ಕರಡು ಮತದಾರರ ಪಟ್ಟಿಯು ಈಗ ಆಗಸ್ಟ್ 17 ರಂದು ಪ್ರಕಟಗೊಳ್ಳಲಿದೆ. ಸಾರ್ವಜನಿಕರ ಆಕ್ಷೇಪಣೆ ಹಾಗೂ ಹಕ್ಕುಗಳ ಪರಿಶೀಲನೆಯ ನಂತರ, ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 19 ರಂದು ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

