ಸಂಪಾಜೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ  ಮೈಸೂರು-ಮಡಿಕೇರಿ ಸಂಸದ ಪ್ರತಾಪ್ ಸಿಂಹ ಚಾಲನೆ

ಸಂಪಾಜೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಮೈಸೂರು-ಮಡಿಕೇರಿ ಸಂಸದ ಪ್ರತಾಪ್ ಸಿಂಹ ಚಾಲನೆ

ಸಂಪಾಜೆಯಿಂದ-ಕಾಟಕೇರಿ ವರೆಗೆ 21.6 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿಗೆ ಸಂಸದ ಪ್ರತಾಪ್ ಸಿಂಹ ಚಾಲನೆ ನೀಡಿದರು.ಸಂಪಾಜೆಯ ಗೇಟ್ ಬಳಿ ಚಾಲನೆ ನೀಡಿ ಮಾತನಾಡಿದ ಅವರು ಸುಮಾರು 14.16 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದ್ದು, 6 ತಿಂಗಳೊಳಗೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಸಂಪಾಜೆಯಿಂದ ಸುಂಟಿಕೊಪ್ಪದವರೆಗೆ 21 ಕಡೆಗಳಲ್ಲಿ ತಡೆಗೋಡೆ ನಿರ್ಮಾಣ ಮಾಡಲು ಈಗಾಗಲೇ ಸರ್ಕಾರಕ್ಕೆ ಅಂದಾಜುಪಟ್ಟಿ ಸಲ್ಲಿಸಲಾಗಿದ್ದು, ಅನುಮೋದನೆ ದೊರೆಯಬೇಕಿದೆ ಎಂದು ಸಂಸದರು ಮಾಹಿತಿ ನೀಡಿದರು.ಹಾಗೆಯೇ ಕುಶಾಲನಗರ ದಿಂದ ಸಂಪಾಜೆಯವರೆಗೆ ಅಪಘಾತ ವಲಯವನ್ನು ಗುರುತಿಸಲಾಗಿದ್ದು, ಪ್ರಮುಖವಾಗಿ ಬೋಯಿಕೇರಿ ಮತ್ತು ಆನೆಕಾಡು ಬಳಿ ರಸ್ತೆ ಸರಿಪಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಇದಕ್ಕಾಗಿ 500 ಲಕ್ಷ ರೂ. ಕಾಮಗಾರಿಗೆ ಸರ್ಕಾರದಿಂದ ಅನುಮೋದನೆ ದೊರೆತಿದೆ ಎಂದು ಪ್ರತಾಪ್ ಸಿಂಹ ತಿಳಿಸಿದರು.

ಕೊಡಗು ಜಿಲ್ಲೆಯ ಕುಶಾಲನಗರ ದಿಂದ ಸಂಪಾಜೆವರೆಗೆ ಹೆದ್ದಾರಿ ಭಾಗದಲ್ಲಿ ಸುಮಾರು 1.3 ಕಿ.ಮೀ. ಮಳೆ ನೀರು ನಿಲ್ಲುವ ಪ್ರದೇಶವನ್ನು ಗುರುತಿಸಲಾಗಿದ್ದು, ಈ ಪ್ರದೇಶವನ್ನು ವಿಸ್ತರಿಸಿ ರಸ್ತೆ ಎತ್ತರೀಕರಣಗೊಳಿಸಲು ಮುಂದಾಗಲಾಗಿದೆ. ಆ ನಿಟ್ಟಿನಲ್ಲಿ ಈ ಕಾಮಗಾರಿಗೆ ಅನುಮೋದನೆ ದೊರೆತಿದ್ದು, ಅಂದಾಜು ಪಟ್ಟಿ ಸಲ್ಲಿಸಬೇಕಿದೆ ಎಂದು ಪ್ರತಾಪ್ ಸಿಂಹ ಹೇಳಿದರು.

ಹೆದ್ದಾರಿಯಲ್ಲಿ ಎರಡು ಕಡೆ ಸೇತುವೆ ನಿರ್ಮಾಣ ಮಾಡಲಾಗುತ್ತದೆ. ಹಾಗೆಯೇ 8 ಕಡೆ ಸಣ್ಣಪುಟ್ಟ ತಡೆಗೋಡೆಗಳನ್ನು ನಿರ್ಮಿಸಲಾಗುತ್ತದೆ. ಜೋಡುಪಾಲ ಬಳಿ ಹೊಸದಾಗಿ ಸೇತುವೆ ನಿರ್ಮಿಸಲಾಗುವುದು ಎಂದು ಅವರು ವಿವರಿಸಿದರು.2018 ರಲ್ಲಿ ಸಂಭವಿಸಿದ ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ 19 ತಡೆಗೋಡೆ ನಿರ್ಮಿಸಲು ಉದ್ದೇಶಿಸಲಾಗಿತ್ತು, 2019 ರಲ್ಲಿಯೂ ಸಹ ಅತಿವೃಷ್ಟಿಯಾದ ಕಾರಣ 21 ತಡೆಗೋಡೆಗಳನ್ನು ನಿರ್ಮಿಸಲಾಗುತ್ತದೆ ಎಂದು ಅವರು ಹೇಳಿದರು.

ಮೈಸೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆದ್ದಾರಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಪ್ರತಾಪ್ ಸಿಂಹ ತಿಳಿಸಿದರು.ಸಂಪಾಜೆ ಗ್ರಾ.ಪಂ.ಅಧ್ಯಕ್ಷರಾದ ರಮಾದೇವಿ, ಬಾಲಚಂದ್ರ ಕಳಗಿ, ಪ್ರಮುಖರಾದ ನಾಗೇಶ್ ಕುಂದಲ್ಪಾಡಿ, ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಶಿವಪ್ರಸಾದ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜಿ.ಎಚ್.ಗಿರೀಶ್, ಸಹಾಯಕ ಎಂಜಿನಿಯರ್ ಹನುಮಂತ, ಸುಧಾಕರಶೆಟ್ಟಿ ಇತರರು ಉಪಸ್ಥಿತರಿದ್ದರು.

ರಾಜ್ಯ