
ಸುಳ್ಯ : ನಾಳೆ ಜುಲೈ 6ರಂದು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ ಸಮಾರಂಭ ಬೆಳಿಗ್ಗೆ 10.30ಕ್ಕೆ ಕೇರ್ಪಳ ಸುಳ್ಯದ ಬಂಟರ ಭವನದಲ್ಲಿ ನಡೆಯಲಿದೆ ಎಂದು ಟಿ.ಎಂ.ಶಹೀದ್ ತೆಕ್ಕಿಲ್ ಅಭಿನಂದನಾ ಸಮಿತಿಯ ಅಧ್ಯಕ್ಷ ಸದಾನಂದ ಮಾವಜಿ ತಿಳಿಸಿದ್ದಾರೆ

ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಆರೋಗ್ಯ ಖಾತೆ ಸಚಿವ ದಿನೇಶ್ ಗುಂಡೂರಾವ್ ಅಭಿನಂದನಾ ಸಂಚಿಕೆ ಬಿಡುಗಡೆ ಮಾಡುವರು. ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹಮ್ಮದ್ 55 ಸೇವಾ ಚಟುವಟಿಕೆಗಳಿಗೆ ಚಾಲನೆ ನೀಡಲಿದ್ದು, ಶಾಸಕರಾದ ಭಾಗೀರಥಿ ಮುರುಳ್ಯ 55 ಸೇವಾ ಚಟುವಟಿಕೆಯ ಸವಲತ್ತು ವಿತರಿಸಲಿದ್ದಾರೆ , ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅವರು ಹೇಳಿದರು.

ಟಿ.ಎಂ.ಶಹೀದ್ ತೆಕ್ಕಿಲ್ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಸನ್ಮಾನಿಸಲಿದ್ದಾರೆ. ಲಯನ್ಸ್ ಸಂಸ್ಥೆಯ ಎಂಜೆಎಫ್ ಎಂ.ಬಿ.ಸದಾಶಿವ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್‌ಗೌಡ, ಮಾಜಿ ಸಚಿವ ರಮಾನಾಥ ರೈ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ .
ಟಿ.ಎಂ.ಶಹೀದ್ ತೆಕ್ಕಿಲ್ ಅವರು 2001ರಲ್ಲಿ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನವನ್ನು ಸ್ಥಾಪಿಸಿ, ಹಲವು ಜನಪರ ಕೆಲಸಗಳನ್ನು ಮಾಡಿದ್ದಾರೆ. 2018ರಲ್ಲಿ ಜೋಡುಪಾಲ ನೆರೆ ಸಂತ್ರಸ್ಥರಿಗೆ ತಮ್ಮ ಮನೆಯಲ್ಲೇ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದರು. ಅವರಿಗೆ ಅಗತ್ಯ ಸಾಮಗ್ರಿಗಳನ್ನು ನೀಡಿದ್ದರು. ಈ ಸಂತ್ರಸ್ಥರನ್ನು ಮೊದಲು ರಕ್ಷಿಸಿದ 18 ಮಂದಿ ಯುವಕರಿಗೆ ಸಂಸ್ಥೆ ವತಿಯಿಂದ ತೆಕ್ಕಿಲ್ ಎಕ್ಸಲೆನ್ಸ್ ಪ್ರಶಸ್ತಿ ನೀಡಿ ಗೌರವಿಸಿದ್ದರು.

ಭಾರತೀಯ ಸಂಸ್ಕೃತಿ, ಭ್ರಾತೃತ್ವ, ಶಿಸ್ತು, ಸ್ವಚ್ಛತೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಮೌಲ್ಯಾಧಾರಿತ ಶಿಕ್ಷಣ ನೀಡುವ ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಯನ್ನು ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಇವರು ಸ್ಥಾಪಿಸಿದ್ದಾರೆ. ಇಷ್ಟು ಮಾತ್ರವಲ್ಲ ಇನ್ನೂ ಅನೇಕ ಜನಪರ ಕೆಲಸಗಳನ್ನು ಇವರು ಮಾಡುತ್ತಿರುವುದರಿಂದ ಸಾರ್ವಜನಿಕರು ಇವರನ್ನು ಸನ್ಮಾನಿಸಲು ನಿರ್ಧರಿಸಿದ್ದಾರೆ .
