
ಉಪ್ಪಿನಂಗಡಿ ನವೆಂಬರ್ 26: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನಪ್ಪಿದ ಘಟನೆ ಶಿರಾಡಿ ಪೇಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸೋಮವಾರ ನಡೆದಿದೆ.

ಮೃತರನ್ನು ಶಿರಾಡಿ ಗ್ರಾಮದ ಪದಂಬಳ ನಿವಾಸಿ ಕೆ.ಎಂ.ಮತ್ತಾಯಿ ಯಾನೆ ಮತ್ತಚ್ಚನ್ (70) ಎಂದು ಗುರುತಿಸಲಾಗಿದೆ. ಪಡಿತರ ತರಲು ಅವರು ಮನೆಯಿಂದ ಶಿರಾಡಿ ಪೇಟೆಗೆ ತೆರಳಿದ್ದರು. ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಅವರಿಗೆ ಧರ್ಮಸ್ಥಳದಿಂದ- ಬೆಂಗಳೂರು ಕಡೆಗೆ ಹೋಗುತ್ತಿದ್ದ ಬಸ್ ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಅಂಬುಲೆನ್ಸ್ ನಲ್ಲಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಹಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.
ಕೆ.ಎಂ. ಮತ್ತಾಯಿ ಅವರ ಹಿರಿಯ ಮಗ ರೆಜಿ ಅವರು ಎರಡು ತಿಂಗಳ ಹಿಂದೆ ಸ್ಕೂಟರ್ನಲ್ಲಿ ಪ್ರಯಾಣಿಸುತ್ತಿದ್ದಾಗ ಉದನೆ ಸಮೀಪದ ನೇಲಡ್ಕದಲ್ಲಿ ಕಾರು ಡಿಕ್ಕಿ ಹೊಡೆದಿತ್ತು. ಈ ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ನೋವಿನಲ್ಲಿರುವಾಗಲೇ ಬಸ್ ಅಪಘಾತದಲ್ಲಿ ಮತ್ತಾಯಿ ಮೃತಪಟ್ಟಿದ್ದು ಕುಟುಂಬಕ್ಕೆ ಆಘಾತವನ್ನುಂಟುಮಾಡಿದೆ.
