ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಉತ್ತರಾಖಂಡದ ಹಲವೆಡೆ ಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಪ್ರಮುಖ ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಪರ್ವತ ಪ್ರದೇಶಗಳಲ್ಲಿನ ನದಿಗಳು ಉಕ್ಕಿ ಹರಿಯುತ್ತಿವೆ.

ಬೆಟ್ಟ ಪ್ರದೇಶಗಳಲ್ಲಿ ಭೂಕುಸಿತ ಮತ್ತು ಮಳೆ ಪರಿಣಾಮವಾಗಿ ಅನೇಕ ರಸ್ತೆ ಮಾರ್ಗಗಳು ಬಂದ್ ಆಗಿವೆ. ಇದರಿಂದ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ.
ಹವಾಮಾನ ಇಲಾಖೆ ಹರಿದ್ವಾರ್, ನೈನಿತಾಲ್ ಮತ್ತು ಉದ್ಧಮ್ ಸಿಂಗ್ ನಗರದ ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ಪ್ರಕಟಿಸಿದ್ದು, ಭಾರೀ ಮಳೆಯ ಮುನ್ಸೂಚನೆ ನೀಡಿದೆ. ದೆಹ್ರಾಡೂನ್, ತೇಹ್ರಿ, ಪೌರಿ, ಚಂಪಾವತ್ ಹಾಗೂ ಬಾಗೇಶ್ವರ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದ್ದು, ತೀವ್ರ ಮಳೆ ಸಾಧ್ಯತೆ ವ್ಯಕ್ತವಾಗಿದೆ.
ಮುಂದಿನ ಕೆಲವು ದಿನಗಳವರೆಗೆ ಈ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ, ಅಧಿಕಾರಿಗಳು ಜನರಿಗೆ ಎಚ್ಚರಿಕೆ ವಹಿಸುವಂತೆ ಹಾಗೂ ಭಾರೀ ಮಳೆಯ ಸಂದರ್ಭಗಳಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಮನವಿ ಮಾಡಿದ್ದಾರೆ.
ಇದಲ್ಲದೆ, ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ಯಾತ್ರೆಯನ್ನು ಆಗಸ್ಟ್ 14ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಯಾತ್ರಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ.

