ಕರಾವಳಿ ಸಹಿತ ರಾಜ್ಯದ ಹಲವೆಡೆ ಮತ್ತೆ ಮಳೆಯ ಅಬ್ಬರ – ಐಎಂಡಿ ಯೆಲ್ಲೋ ಅಲರ್ಟ್ ಘೋಷಣೆ

ಕರಾವಳಿ ಸಹಿತ ರಾಜ್ಯದ ಹಲವೆಡೆ ಮತ್ತೆ ಮಳೆಯ ಅಬ್ಬರ – ಐಎಂಡಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು, ಅಕ್ಟೋಬರ್ 21:
ರಾಜ್ಯಾದ್ಯಂತ ಮತ್ತೆ ಮಳೆಯ ಅಬ್ಬರ ಆರಂಭವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ನಾಳೆ (ಅಕ್ಟೋಬರ್ 22)ರಿಂದ ಮುಂದಿನ ನಾಲ್ಕು ದಿನಗಳವರೆಗೆ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ನೈಋತ್ಯ ಬಂಗಾಳಕೊಲ್ಲಿಯಲ್ಲಿ ಉಂಟಾದ ಹವಾಮಾನ ಬದಲಾವಣೆಗಳಿಂದಾಗಿ ಈ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇಂದು (ಅಕ್ಟೋಬರ್ 21) ಸಹ ಬೆಂಗಳೂರಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ.

ಭಾರೀ ಮಳೆ ಮತ್ತು ಗಾಳಿಯ ಎಚ್ಚರಿಕೆ

ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಸಂಜೆಯ ನಂತರ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಒಳನಾಡು ಜಿಲ್ಲೆಗಳಲ್ಲಿ: ಮಳೆಯೊಂದಿಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ.

ಕರಾವಳಿ ಜಿಲ್ಲೆಗಳಲ್ಲಿ: ಪರಿಸ್ಥಿತಿ ಹೆಚ್ಚು ತೀವ್ರವಾಗಿದ್ದು, ಗಾಳಿಯ ವೇಗ ಗಂಟೆಗೆ 55 ಕಿ.ಮೀ ತಲುಪಬಹುದು ಎಂದು ಎಚ್ಚರಿಕೆ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಮೀನುಗಾರರು ಮುಂದಿನ ಕೆಲವು ದಿನಗಳವರೆಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮನವಿ ಮಾಡಿದೆ.

ಹವಾಮಾನ ವರದಿ