ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಕಠಿಣ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಹೊಸ ವರ್ಷದ ಪಾರ್ಟಿಗಳಿಗೆ ಸಮಯದ ಮಿತಿ ನಿಗದಿಪಡಿಸಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.
ರಾತ್ರಿ 12:30ಕ್ಕೆ ಪಾರ್ಟಿಗಳಿಗೆ ತೆರೆ ನಗರದ ಹೋಟೆಲ್‌ಗಳು, ರೆಸಾರ್ಟ್‌ಗಳು, ಪಬ್ ಮತ್ತು ಕ್ಲಬ್‌ಗಳಲ್ಲಿ ನಡೆಯುವ ಹೊಸ ವರ್ಷದ ಕಾರ್ಯಕ್ರಮಗಳು ರಾತ್ರಿ 12:30ರ ಒಳಗೆ ಕಡ್ಡಾಯವಾಗಿ ಮುಕ್ತಾಯಗೊಳ್ಳಬೇಕು. ಶಬ್ದ ಮಾಲಿನ್ಯ ತಡೆಗಟ್ಟಲು ಡಿಜೆ (DJ) ಮತ್ತು ಧ್ವನಿವರ್ಧಕಗಳ ಬಳಕೆಗೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ಪಾಲಿಸಬೇಕು ಎಂದು ಸೂಚಿಸಲಾಗಿದೆ.
ಡ್ರಂಕ್ ಅಂಡ್ ಡ್ರೈವ್, ಹದ್ದಿನ ಕಣ್ಣು– ಹೊಸ ವರ್ಷದ ಮುನ್ನಾದಿನದಂದು ಸಂಭವಿಸುವ ಅಪಘಾತಗಳನ್ನು ತಡೆಯಲು ನಗರದಾದ್ಯಂತ ‘ಡ್ರಂಕ್ ಅಂಡ್ ಡ್ರೈವ್’ ತಪಾಸಣೆಯನ್ನು ತೀವ್ರಗೊಳಿಸಲಾಗುವುದು.
ಮಂಗಳೂರಿನ ಪಣಂಬೂರು, ತಣ್ಣೀರುಬಾವಿ ಮತ್ತು ಸೋಮೇಶ್ವರ ಬೀಚ್‌ಗಳಲ್ಲಿ ಜನದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡುವುದು ಮತ್ತು ಅಸಭ್ಯ ವರ್ತನೆ ತೋರುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಕಮಿಷನರ್ ತಿಳಿಸಿದ್ದಾರೆ.

