ಬಳ್ಳಾರಿ ಗಲಭೆ: ಮೃತಪಟ್ಟ ವ್ಯಕ್ತಿಗೆ ತಗುಲಿದ್ದು ಪೊಲೀಸ್ ಗುಂಡಲ್ಲ; ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ಬಳ್ಳಾರಿ ಗಲಭೆ: ಮೃತಪಟ್ಟ ವ್ಯಕ್ತಿಗೆ ತಗುಲಿದ್ದು ಪೊಲೀಸ್ ಗುಂಡಲ್ಲ; ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಶನಿವಾರ ಮಹತ್ವದ ಹೇಳಿಕೆ ನೀಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಆ ವ್ಯಕ್ತಿಯ ಸಾವಿಗೆ ಕಾರಣವಾದ ಗುಂಡು ಪೊಲೀಸರ ಬಂದೂಕಿನಿಂದ ಹಾರಿದ್ದಲ್ಲ, ಬದಲಾಗಿ ಖಾಸಗಿ ರಿವಾಲ್ವರ್‌ನಿಂದ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಶನಿವಾರ ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಘಟನೆಯ ಕುರಿತು ಸಮಗ್ರ ತನಿಖೆ ನಡೆಯುತ್ತಿದೆ ಎಂದು ಭರವಸೆ ನೀಡಿದರು.

​ಘಟನೆಯ ಹಿನ್ನೆಲೆ​ – ಗುರುವಾರ ರಾತ್ರಿ ಬಳ್ಳಾರಿ ನಗರದಲ್ಲಿ ಬ್ಯಾನರ್ ಅಳವಡಿಸುವ ವಿಚಾರವಾಗಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಗಂಗಾವತಿ ಬಿಜೆಪಿ ಶಾಸಕ ಜಿ. ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ತೀವ್ರ ಘರ್ಷಣೆ ನಡೆದಿತ್ತು. ಈ ವೇಳೆ ನಡೆದ ಗಲಾಟೆಯಲ್ಲಿ ಗುಂಡು ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಇದರಿಂದಾಗಿ ಬಳ್ಳಾರಿಯ ಹಲವು ಭಾಗಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಪ್ರಸ್ತುತ ಬಳ್ಳಾರಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಅಪರಾಧ ರಾಜ್ಯ