ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ–ಮೂವರು ಅಪ್ರಾಪ್ತ ಬಾಲಕರು ಪೊಲೀಸ್ ವಶಕ್ಕೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ–ಮೂವರು ಅಪ್ರಾಪ್ತ ಬಾಲಕರು ಪೊಲೀಸ್ ವಶಕ್ಕೆ

ಹುಬ್ಬಳ್ಳಿ: ನಗರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮೂವರು ಅಪ್ರಾಪ್ತ ಬಾಲಕರನ್ನು ಹುಬ್ಬಳ್ಳಿ-ಧಾರವಾಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿಯ ನಿವಾಸಿಯಾಗಿರುವ ಅಪ್ರಾಪ್ತ ಬಾಲಕಿಯ ಮೇಲೆ ಕಳೆದ ಏಳು-ಎಂಟು ದಿನಗಳಿಂದ ಲೈಂಗಿಕ ದೌರ್ಜನ್ಯ ನಡೆಯುತ್ತಿತ್ತು ಎಂದು ತಿಳಿದುಬಂದಿದೆ. ಬಾಲಕಿಯ ಪೋಷಕರು ಕೆಲಸದ ನಿಮಿತ್ತ ಹಗಲಿನಲ್ಲಿ ಮನೆಯಿಂದ ಹೊರಗೆ ಹೋಗುತ್ತಿದ್ದ ಸಂದರ್ಭವನ್ನು ಬಳಸಿಕೊಂಡ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಬಾಲಕಿಯು ಈ ವಿಷಯವನ್ನು ತಿಳಿಸಿದ ನಂತರ ಪೋಷಕರು ದೂರು ನೀಡಿದ್ದು, ಪೊಲೀಸರು ಕೂಡಲೇ ಕ್ರಮ ಕೈಗೊಂಡಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಅವರು, “ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯ ನಡೆದ ಬಗ್ಗೆ ದೂರು ದಾಖಲಾಗಿದೆ. ಈ ಕೃತ್ಯದಲ್ಲಿ ಭಾಗಿಯಾದ ಮೂವರು ಆರೋಪಿಗಳು 14 ರಿಂದ 15 ವರ್ಷ ವಯಸ್ಸಿನ ಅಪ್ರಾಪ್ತರಾಗಿದ್ದಾರೆ. ಈಗಾಗಲೇ ಮೂವರನ್ನು ವಶಕ್ಕೆ ಪಡೆಯಲಾಗಿದೆ,” ಎಂದು ತಿಳಿಸಿದ್ದಾರೆ.

ಆರೋಪಿಗಳು ಅಪ್ರಾಪ್ತರಾಗಿರುವುದರಿಂದ, ಪೊಲೀಸರು ಪೋಕ್ಸೋ ಕಾಯ್ದೆ ಹಾಗೂ ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯಡಿ ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಅನುಸರಿಸುತ್ತಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.

ಅಪರಾಧ ರಾಜ್ಯ