ಕಿಂಗ್ ಕೊಹ್ಲಿ ಅವರ ಸಮಯೋಚಿತ ಬ್ಯಾಟಿಂಗ್ ಹಾಗೂ ನಾಯಕ ಶುಭಮನ್ ಗಿಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 4 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಪಡೆದುಕೊಂಡಿದೆ.

ಭಾನುವಾರ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ನೀಡಿದ್ದ 301 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಭಾರತಕ್ಕೆ ವಿರಾಟ್ ಕೊಹ್ಲಿ ಆಸರೆಯಾದರು. ಕೇವಲ 91 ಎಸೆತಗಳಲ್ಲಿ 93 ರನ್ ಸಿಡಿಸಿದ ಕೊಹ್ಲಿ, ತಮ್ಮ ಇನ್ನಿಂಗ್ಸ್‌ನಲ್ಲಿ 8 ಬೌಂಡರಿ ಹಾಗೂ 1 ಸಿಕ್ಸರ್ ಬಾರಿಸಿದರು. ಇವರಿಗೆ ಸಾಥ್ ನೀಡಿದ ನಾಯಕ ಶುಭಮನ್ ಗಿಲ್ 56 ರನ್ ಗಳಿಸಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟರು.
ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ 49 ರನ್ ಗಳಿಸಿ ತಂಡದ ಗೆಲುವನ್ನು ಸುಲಭಗೊಳಿಸಿದರು. ಅಂತಿಮವಾಗಿ ಭಾರತ 49 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 306 ರನ್ ಗಳಿಸಿ ಗುರಿ ತಲುಪಿತು.
ನ್ಯೂಜಿಲೆಂಡ್ ಪರ ಬೌಲಿಂಗ್‌ನಲ್ಲಿ ಮಿಂಚಿದ ಕೈಲ್ ಜೇಮಿಸನ್ 41 ರನ್ ನೀಡಿ 4 ವಿಕೆಟ್ ಕಬಳಿಸಿದರೂ, ತಂಡವನ್ನು ಸೋಲಿನಿಂದ ರಕ್ಷಿಸಲು ಸಾಧ್ಯವಾಗಲಿಲ್ಲ. ಆದಿತ್ಯ ಅಶೋಕ್ ಮತ್ತು ಕ್ರಿಸ್ಟಿಯನ್ ಕ್ಲಾರ್ಕ್ ತಲಾ ಒಂದು ವಿಕೆಟ್ ಪಡೆದರು.

