ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳುವ ಬಗ್ಗೆ ಕಳೆದ ಕೆಲವು ದಿನಗಳಿಂದ ಇದ್ದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಪಾಕಿಸ್ತಾನ ತಂಡವು ಟೂರ್ನಿಯಲ್ಲಿ ಭಾಗವಹಿಸಲು ಅಲ್ಲಿನ ಸರ್ಕಾರ ಅಧಿಕೃತವಾಗಿ ಹಸಿರು ನಿಶಾನೆ ನೀಡಿದೆ. ಆದರೆ, ಭಾರತದ ವಿರುದ್ಧ ಫೆಬ್ರವರಿ 15ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯವನ್ನು ಮಾತ್ರ ಬಹಿಷ್ಕರಿಸುವುದಾಗಿ ಪಾಕಿಸ್ತಾನ ಘೋಷಿಸಿದೆ.

ಭದ್ರತಾ ಕಾರಣಗಳನ್ನು ಮುಂದಿಟ್ಟುಕೊಂಡು ಭಾರತದಲ್ಲಿ ನಡೆಯಲಿರುವ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸಬೇಕೆಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ಮನವಿ ಮಾಡಿತ್ತು. ಆದರೆ ಐಸಿಸಿ ಈ ಬೇಡಿಕೆಯನ್ನು ತಿರಸ್ಕರಿಸಿ, ಬಾಂಗ್ಲಾದೇಶದ ಬದಲಿಗೆ ಸ್ಕಾಟ್ಲೆಂಡ್ ತಂಡವನ್ನು ಟೂರ್ನಿಗೆ ಸೇರ್ಪಡೆಗೊಳಿಸಿತ್ತು. ಐಸಿಸಿಯ ಈ ನಿರ್ಧಾರವನ್ನು ಖಂಡಿಸಿ ಪ್ರತಿಭಟನೆಯ ರೂಪದಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ಪಾಕಿಸ್ತಾನ ನಿರ್ಧರಿಸಿದೆ.
ಈ ಕುರಿತು ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಪಾಕಿಸ್ತಾನ ಸರ್ಕಾರ, “ಪಾಕಿಸ್ತಾನ ತಂಡಕ್ಕೆ 2026ರ ಟಿ20 ವಿಶ್ವಕಪ್ನಲ್ಲಿ ಪಾಲ್ಗೊಳ್ಳಲು ಅನುಮತಿ ನೀಡಲಾಗಿದೆ. ಆದರೆ ಫೆಬ್ರವರಿ 15 ರಂದು ಭಾರತದ ವಿರುದ್ಧ ಕೊಲೊಂಬೊದಲ್ಲಿ ನಡೆಯಬೇಕಿದ್ದ ಪಂದ್ಯದಲ್ಲಿ ಪಾಕ್ ತಂಡ ಕಣಕ್ಕಿಳಿಯುವುದಿಲ್ಲ” ಎಂದು ತಿಳಿಸಿದೆ.

