ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಗನಕ್ಕೇರಲಿವೆ ಎಂಬ ವದಂತಿಗಳ ನಡುವೆಯೇ, ರಾಜ್ಯದ ಜನತೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನಿರಾಳದ ಸುದ್ದಿ ನೀಡಿದ್ದಾರೆ. ಸದ್ಯಕ್ಕೆ ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಡೀಸೆಲ್ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ನಾವು ಬಸ್ ದರವನ್ನು ಹೆಚ್ಚಿಸುವುದಿಲ್ಲ. ಪ್ರಯಾಣಿಕರ ಮೇಲೆ ಹೆಚ್ಚಿನ ಹೊರೆ ಹೊರಿಸುವ ಉದ್ದೇಶ ಸರ್ಕಾರಕ್ಕಿಲ್ಲ,” ಎಂದು ತಿಳಿಸಿದರು.
ಕಳೆದ ಕೆಲವು ದಿನಗಳಿಂದ ಇಂಧನ ಬೆಲೆ ಏರಿಕೆಯಾಗಲಿದೆ ಎಂಬ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ಜೋರಾಗಿದ್ದವು. ಇದು ಸಹಜವಾಗಿಯೇ ಬಸ್ ಪ್ರಯಾಣ ದರದ ಮೇಲೂ ಪರಿಣಾಮ ಬೀರಬಹುದು ಎಂಬ ಆತಂಕ ಸೃಷ್ಟಿಸಿತ್ತು. ಆದರೆ, ಸಚಿವರ ಈ ಹೇಳಿಕೆಯು ದಿನನಿತ್ಯ ಸಾರಿಗೆ ಬಸ್ಗಳನ್ನು ಅವಲಂಬಿಸಿರುವ ಲಕ್ಷಾಂತರ ಪ್ರಯಾಣಿಕರಿಗೆ ನೆಮ್ಮದಿ ತಂದಿದೆ.

