ಬೆಳ್ತಂಗಡಿ: ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಮೇ 17ರ ಭಾನುವಾರ ರಾತ್ರಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಮಹಿಳೆಯೊಬ್ಬರು ಸ್ಥಳದಲ್ಲೇ ದುರಂತ ಅಂತ್ಯ ಕಂಡಿದ್ದಾರೆ.

ಮೃತರನ್ನು ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ‘ಬಳಂಜ ಫಾರ್ಮ್ಸ್’ ಮಾಲಕ ಹಾಗೂ ಪ್ರಗತಿಪರ ಕೃಷಿಕರಾಗಿರುವ ಅನಿಲ್ ಭಟ್ (ಅನಿಲ್ ಬಳಂಜ) ಅವರ ಪತ್ನಿ ಎಂದು ಗುರುತಿಸಲಾಗಿದೆ.
ಘಟನೆಯ ವಿವರ: ಲಭ್ಯವಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ದಂಪತಿಗಳು ಬೈಕ್ನಲ್ಲಿ ಸಂಚರಿಸುತ್ತಿದ್ದ ವೇಳೆ ಆಲ್ಟೊ ಕಾರೊಂದರ ನಡುವೆ ಭೀಕರ ಢಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಬೈಕ್ನಲ್ಲಿದ್ದ ಮಹಿಳೆ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಅಪಘಾತದಲ್ಲಿ ಪುತ್ರನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕೃಷಿಕ ಅನಿಲ್ ಭಟ್ ಅವರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಪೊಲೀಸರ ಭೇಟಿ:ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಅಪಘಾತಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

