ರಾಜ್ಯದಲ್ಲಿ ಮುಂಗಾರು ಗಣನೀಯವಾಗಿ ಚುರುಕುಗೊಂಡಿದ್ದು, ವರುಣನ ಆರ್ಭಟ ಜೋರಾಗಿದೆ. ಮಳೆಯ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಮುಂದಿನ ಮೂರು ದಿನಗಳ ಕಾಲ ಅತ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿ ‘ರೆಡ್ ಅಲರ್ಟ್’ (Red Alert) ಘೋಷಿಸಿದೆ.

ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರ ಬಿಡುಗಡೆ ಮಾಡಿರುವ ವರದಿಯ ಪ್ರಕಾರ, ಜೂನ್ 8ರಿಂದ ಜೂನ್ 10ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿ ವೃಷ್ಟಿಯಾಗುವ ಸಾಧ್ಯತೆ ದಟ್ಟವಾಗಿದೆ.
ಜಿಲ್ಲಾವಾರು ಹವಾಮಾನ ಮುನ್ಸೂಚನೆ.
ಜೂನ್ 8 (ಸೋಮವಾರ):ಮುಂಗಾರು ಮಾರುತಗಳ ಪ್ರಭಾವದಿಂದಾಗಿ ಸೋಮವಾರದಂದು ಕರಾವಳಿಯ ಪ್ರಮುಖ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಜಾರಿಯಲ್ಲಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೂನ್ 9 (ಮಂಗಳವಾರ):ಮಂಗಳವಾರದ ವೇಳೆಗೆ ಮಳೆಯ ಅಬ್ಬರ ಮತ್ತಷ್ಟು ವ್ಯಾಪಿಸಲಿದೆ. ಕರಾವಳಿ ಮತ್ತು ಮಲೆನಾಡಿನ ಒಟ್ಟು 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. (ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ)
ರೆಡ್ ಅಲರ್ಟ್ ಘೋಷಣೆಯಾಗಿರುವ ಜಿಲ್ಲೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆಯಿದ್ದು, ನದಿ ತೀರದ ನಿವಾಸಿಗಳು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮತ್ತು ಸುರಕ್ಷಿತ ಸ್ಥಳಗಳಲ್ಲೇ ಇರುವಂತೆ ಜಿಲ್ಲಾಡಳಿತಗಳು ಮುನ್ನೆಚ್ಚರಿಕೆ ನೀಡಿವೆ. ಸಿಡಿಲು ಮತ್ತು ಬಿರುಗಾಳಿಯ ಮುನ್ನೆಚ್ಚರಿಕೆಯನ್ನೂ ನೀಡಲಾಗಿದೆ.

