
ಸುಳ್ಯ:ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ಇದರ ವತಿಯಿಂದ ಬೆಂಗಳೂರು ನಗರ ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವು ಬೆಂಗಳೂರಿನ ಕುವೆಂಪು ಕಲಾಕ್ಷೇತ್ರದಲ್ಲಿ ಮಾರ್ಚ್ 15ರಂದು ನಡೆಯಿತು.ಸಮಾರಂಭದಲ್ಲಿ ಆದಿಚುಂಚನಗಿರಿ ಶಾಖಾ ಮಠ ವಿಜಯನಗರ ಬೆಂಗಳೂರು ಇದರ ಪೂಜ್ಯ ಯತೀವರ್ಯರಾದ ಶ್ರೀ ಸೌಮ್ಯನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ರೇಣುಕಾ ಪ್ರಸಾದ್ ಕೆ.ವಿ ಯವರು ಅಧ್ಯಕ್ಷ ಸ್ಥಾನದಿಂದ ಮಾತನಾಡಿ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಒಕ್ಕಲಿಗರ ಸಂಘ ಸದಾ ಬದ್ಧವಾಗಿದೆ ಇಂತಹಾ ಉತ್ತಮ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ರೀತಿಯಲ್ಲಿ ವಿದ್ಯಾರ್ಜನೆಯನ್ನು ಪಡೆದು ಸಮಾಜದಲ್ಲಿ ಉನ್ನತ ಸ್ಥಾನಮಾನವನ್ನು ಪಡೆಯಬೇಕೆಂದು ಶುಭ ಹಾರೈಸಿದರು. ಉಭಯ ಜಿಲ್ಲೆಯ 452 ವಿದ್ಯಾರ್ಥಿಗಳಿಗೆ ತಲಾ ರೂ. 5,000ದಂತೆ ನಗದು, ಸ್ಮರಣಿಕೆ, ಶಾಲು ಮತ್ತು ಹಾರ ಹಾಕಿ ವಿದ್ಯಾರ್ಥಿಗಳನ್ನು ಗೌರವಿಸಿದರು.ಸಮಾರಂಭದ ವೇದಿಕೆಯಲ್ಲಿ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ನಿರ್ದೇಶಕರು ಉಪಸ್ಥಿತರಿದ್ದರು.

